2 Samuel 6
David holt die Lade
1ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ 2ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು. 3ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.
4ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.
Usa berührt die Lade
5ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು. 6ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. 7ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.
8ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ. 9ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು, 10ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.
11ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.
Die Lade zieht in die Stadt ein
12ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು. 13ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು. 14ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.
15ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.
Michal verachtet David
16ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು 17ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು. 18ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.
19ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. 20ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು. 21ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.
22ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು. 23ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.